ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಸಂಪಾದಕೀಯ
- Jan 10
- 1 min read
ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಸ್ವತಃ ತಾವೇ ತಾತ್ಕಾಲಿಕ ತಡೆಯೊಡ್ಡಿದ್ದ ಅನರ್ಹ ಬಿಪಿಎಲ್ ಕಾರ್ಡ್‌ಗಳಿಗೆ ಕತ್ತರಿ ಹಾಕುವ ಪ್ರಕ್ರಿಯೆಗೆ ಮರುಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಒಟ್ಟಾರೆ 1.53 ಕೋಟಿ ವಿವಿಧ ಪ್ರಕಾರದ ಪಡಿತರಚೀಟಿಗಳಿದ್ದು, 5.30 ಕೋಟಿ ಸದಸ್ಯ ಫಲಾನುಭವಿಗಳಿದ್ದಾರೆ. ಇದರಲ್ಲಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್ ಕಾರ್ಡ್)ದಾರರು ಬಹುಪಾಲು ಅಂದರೆ 1.27 ಕೋಟಿ ಇದ್ದಾರೆ. ಆದರೆ ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದೆ ಬಿಪಿಎಲ್ ಪಡಿತರಚೀಟಿ ಹೊಂದಿದ್ದಾರೆ. ಅಂತಹವರನ್ನು ಗುರುತಿಸಿ ತೆಗೆದು ಹಾಕಬೇಕು ಎಂದು ಖಡಕ್ ಸೂಚನೆ ನೀಡಿದರು.
ಅರ್ಹರದ್ದು ರದ್ದು ಮಾಡದಿರಿ : "ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ತಮ್ಮ ಕಾರ್ಡ್ ಗಳನ್ನು ಹಿಂದಿರುಗಿಸಲು ಕಾಲಾವಕಾಶ ನೀಡಬೇಕು. ಬಳಿಕ ಅಂಥವರಿಗೆ ನೋಟಿಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು" ಎಂದು ನಿರ್ದೇಶನ ನೀಡಿದ ಸಿಎಂ, "ಈ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಬಾರದು" ಎಂದೂ ಸ್ಪಷ್ಟವಾಗಿ ಹೇಳಿದರು.
"ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4,692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3,253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4.44 ಕೋಟಿ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ" ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
Comments